ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡುವ ತೀರ್ಮಾನ ಮಾಡಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ಅವರು ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಅಂಕಗಳನ್ನು ನೀಡಲು ನಿರ್ಧರಿಸಲಾಗಿದೆ. ಈ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸುತ್ತದೆ. ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್ ನೀಡಲಾಗುವುದು ಎಂದರು.
ಒಂದು ವೇಳೆ ವಿದ್ಯಾರ್ಥಿಗೆ ಫಲಿತಾಂಶ, ಅಂಕ ತೃಪ್ತಿಯಾಗದಿದ್ದಲ್ಲಿ ಕೋವಿಡ್ ಅಲೆ ನಿಯಂತ್ರಣಕ್ಕೆ ಬಂದ ನಂತರ ಇಲಾಖೆ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬಹುದು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗ್ರೇಡಿಂಗ್ ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.
ಪ್ರಸ್ತುತ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಫಲಿತಾಂಶವನ್ನು ನೀಡಲು ಸ್ಪಷ್ಟ ದಾಖಲೆಗಳು ಲಭ್ಯವಿಲ್ಲದ ಕಾರಣ ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ದಿನಗಳಲ್ಲಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಇವರನ್ನು ಪರೀಕ್ಷೆ ಇಲ್ಲದೆ ಪಾಸು ಮಾಡಲ್ಲ ಎಂದರು.
ಜುಲೈ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, 20 ದಿನ ಮೊದಲೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡುತ್ತೇವೆ, ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಲಾಗುವುದು. ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೂ ಎನ್-95 ಮಾಸ್ಕ್ ನೀಡಲಾಗುವುದು. ಪರೀಕ್ಷಾ ಮೇಲ್ವಿಚಾರಕರಿಗೆ ವ್ಯಾಕ್ಸಿನೇಷನ್ ಮಾಡುವುದಾಗಿ ಅವರು ಹೇಳಿದರು..
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಸಿಬಿಎಸ್‌ಇ ಯಲ್ಲಿ ಪಿರಿಯಾಡಿಕಲ್ ಪರೀಕ್ಷೆ ಇರುತ್ತದೆ. ರಾಜ್ಯ ಪರೀಕ್ಷೆಗಳಲ್ಲಿ ಆ ವ್ಯವಸ್ಥೆ ಇಲ್ಲ. ಹಾಗಾಗಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುವ ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿಗಳು, ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಿದ್ದೇನೆ. ಶಿಕ್ಷಣ ತಜ್ಞರು, ಹಿರಿಯ ಪತ್ರಕರ್ತರು ಎಲ್ಲರ ಜತೆ ಚರ್ಚಿಸಿ ಈ ತೀರ್ಮಾನ ಕೈಗೊಂಡಿರುವುದಾಗಿ ಹೇಳಿದರು.
Share your comments