1. ಸುದ್ದಿಗಳು

1-8 ತರಗತಿ ಪ್ರಾರಂಭ ಆ. 30ರ ಸಭೆಯಲ್ಲಿ ನಿರ್ಧಾರ- ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಆ. 30 ರಂದು 1 ರಿಂದ 8 ನೇ ತರಗತಿ ಶಾಲೆಗಳನ್ನು ಆರಂಭಿಸುವ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಂದು ಮಕ್ಕಳಿಗೆ ಭೌತಿಕ ತರಗತಿಗಳನ್ನು ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆ ಚರ್ಚಿಸಿ  ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ಗಾಗಲೇ 9 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಅದರ ಸಾಧಕ-ಬಾಧಕಗಳನ್ನು ಅವಲೋಕಿಸಿ 1 ರಿಂದ 8 ನೇ ತರಗತಿಗಳನ್ನು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದರು.

ಉನ್ನತ ಮಟ್ಟದ ತಜ್ಞರ ಸಮಿತಿಯ ಸದಸ್ಯರಾದ ಡಾ. ದೇವಿಪ್ರಸಾದ ಶೆಟ್ಟಿ ಅವರು 6 ರಿಂದ 8ನೇ ತರಗತಿ ಆರಂಭಿಸಬಹುದೆಂದು ಸಲಹೆ ನೀಡಿದ್ದಾರೆ. ಜೊತೆಗೆ ಈಗಾಗಲೇ ಆರಂಭವಾದ ಶಾಲೆಗಳ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರಿಂದ ಉತ್ತಮ ಉತ್ಸಾಹ ಕಂಡುಬಂದಿದೆ. ಇದರಿಂದ ಶಾಲೆಗಳನ್ನು ಆರಂಭಿಸಬೇಕೆಂಬ ಆಲೋಚನೆ ವ್ಯಕ್ತವಾಗುತ್ತಿದ್ದು, ತಾಂತ್ರಿಕ ಸಮಿತಿಯ ವರದಿ ಮೇಲೆ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಪ್ರಾಥಮಿಕ ಹಂತದಿಂದಲೇ ಶಾಲೆಗಳನ್ನು ಆರಂಭಿಸಲು ಡಾ. ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಕೂಡ ಸಲಹೆ ನೀಡಿದೆ. ಆದರೆ, ತಾಂತ್ರಿಕ ಸಮಿತಿಯ ವರದಿ ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು. ಕೋವಿಡ್ 3ನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದರು
ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಪುನಃ ಶಿಕ್ಷಣ ನೀಡುವ ಉದ್ದೇಶದಿಂದ 1 ರಿಂದ 8ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಉತ್ಸುಕವಾಗಿದೆ. ಮಕ್ಕಳ ತಜ್ಞರು ಹಾಗೂ ಶಿಕ್ಷಣ ತಜ್ಞರು ಸೇರಿದಂತೆ ಎಲ್ಲರೂ ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ಆಧಾರದ ಮೇಲೆ ಶಾಲೆಗಳನ್ನು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಆರಂಭಿಸಲಾಗುವುದು. ಒಂದುವೇಳೆ ಮೂರನೇ ಅಲೆ ವ್ಯಾಪಿಸಿದರೆ ಶಾಲೆಗಳನ್ನು ಬಂದ್ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಹೆಚ್ಚಿನ ಶಿಕ್ಷಕರಿಗೆ ಅನುಕೂಲವಾಗುವಂತೆ ಶಿಕ್ಷಕರ ವರ್ಗಾವಣೆ ನಡೆಸಲಾಗುತ್ತಿದೆ. ಸೆಪ್ಟೆಂಬರ್ 5 ರಿಂದ ಕೌನ್ಸಲಿಂಗ್ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಇದರಿಂದ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಗೆ ಅನುಕೂಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು

ಶೇ. 50 ರಷ್ಟು ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ. 9 ಹಾಗೂ 10ನೇ ತರಗತಿ ಮಕ್ಕಳಿಗೆ ಪೂರ್ಣಪ್ರಮಾದ ಪುಸ್ತಕಗಳ ಲಭ್ಯತೆಯಿದೆ. ಸೆ. 15 ರ ಒಳಗೆ ಎಲ್ಲಾ ಶಾಲೆಗಳಿಗೆ ಶೇ. 100 ರಷ್ಟು ಪುಸ್ತಕ ವಿತರಣೆ ಆಗಲಿದೆ ಎಂದು ಪ್ರತಿಕ್ರಿಯಿಸಿದರು.

ಆ.28 ರಿಂದ 30ರವರೆಗೆ ಸಿಇಟಿ-2021: 530 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿ.ಇ.ಟಿ.-2021) ನಡೆಸಲು ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿದ್ದು, ಕೋವಿಡ್ ಅನ್ನು ಗಮನದಲ್ಲಿರಿಸಿಕೊಂಡು ಎಲ್ಲಾ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಆ.28ರಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆದರೆ, ಆ.29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯು ಆ.30ರಂದು ನಿಗದಿಯಾಗಿದೆ.

530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದರೆ, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ. ಆಯಾ ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

Published On: 26 August 2021, 08:24 PM English Summary: Discussion on august 30 on primary schools reopen

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.