ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನಕ್ಕಾಗಿ ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ 304 DYSPಗಳು ಸೇರಿದಂತೆ 68,119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅವಶ್ಯಕತೆಗೆ ಅನುಗುಣವಾಗಿ ಅಧಿಕಾರಿ/ಸಿಬ್ಬಂದಿಗಳ ಕೊರತೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಹೊರ ರಾಜ್ಯಗಳಿಂದ ಸುಮಾರು 8500 ಪೊಲೀಸ್ ಅಧಿಕಾರಿ/ಸಿಬ್ಬಂದಿ ಹಾಗೂ ಗೃಹ ರಕ್ಷಕ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕಾಗಿ ನೀಯೋಜಿಸಲಾಗಿದೆ.
650 CAPF ಕಂಪನಿಗಳ ಜೊತೆಗೆ ರಾಜ್ಯ ಸಶಸ್ತ್ರ ಮೀಸಲು ಪಡೆಯನ್ನು ಸಹ ನಿಯೋಜಿಸಲಾಗಿದೆ. ಮತದಾನ ದಿನದಂದು 1.56 ಲಕ್ಷ ಪೊಲೀಸರನ್ನು ಬಂದೋಬಸ್ತ್ಗಾಗಿ ಬಳಸಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 18,226 ಮತಗಟ್ಟೆಗಳಿದ್ದು, ಅದರಲ್ಲಿ 11,142 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಅನುಗುಣವಾಗಿ ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚುವರಿಯಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮತದಾನ ದಿನದಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಮತ್ತು ಚುನಾವಣಾ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ 700 ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ಗಡಿ ಭಾಗದಲ್ಲಿ ಸುಮಾರು 700 ಕ್ಕೂ ಹೆಚ್ಚು ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಕಳೆದ 6 ತಿಂಗಳಿನಿಂದ ಜಾರಿ ಆಗದೆ ಇರುವ 5500 ಜಾಮೀನು ರಹಿತ ವಾರೆಂಟ್ಗಳನ್ನು ಜಾರಿ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ 30,414 ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಸನ್ನಡತೆ ಆಧಾರದ ಮೇಲೆ 53,407 ವ್ಯಕ್ತಿಗಳನ್ನು ಬಾಂಡ್ ಒವರ್ ಮಾಡಲಾಗಿದೆ. ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗದಂತೆ ಶಾಂತಿಯುತವಾದ ಮತದಾನ ನಡೆಯಲು ಒಟ್ಟು 714 ವ್ಯಕ್ತಿಗಳ ವಿರುದ್ಧ ಗಡಿಪಾರು ಕಾಯ್ದೆಯಡಿ ಕಾನೂನು ಕ್ರಮ ಕೈಗೊಂಡಿದ್ದು, ಶಾಂತಿಯುತ ಮತದಾನಕ್ಕಾಗಿ 68 ಹವ್ಯಾಸಿ ಅಪರಾಧಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ ನೆರೆಹೊರೆಯ ರಾಜ್ಯಗಳ ಗಡಿಭಾಗಗಳಲ್ಲಿ, ಶಾಂತಿ, ಸೌಹಾರ್ದತೆಯ ಕಾಪಾಡುವ ನಿಟ್ಟಿನಲ್ಲಿ ವಿವಿಧ ಹಂತದ ಅಧಿಕಾರಿಗಳಾದ ಐಜಿಪಿ, ಎಸ್ಪಿ, ಡಿಸಿ ಹಾಗೂ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಅಂತರ್ ರಾಜ್ಯ ಗಡಿಭಾಗದ ಜಿಲ್ಲೆಯ ಅಧಿಕಾರಿಗಳೊಂದಿಗೆ ೫೦ಕ್ಕೂ ಹೆಚ್ಚು ಸಮನ್ವಯ ಸಭೆಗಳನ್ನು ನಡೆಸಿದ್ದು, ಚುನಾವಣೆಯಲ್ಲಿ ನೆರೆ ರಾಜ್ಯಗಳಿಂದ ಅನಧಿಕೃತ ಹಣ, ಮದ್ಯ, ಉಚಿತ ಹಾಗೂ ಇತರೆ ವಸ್ತುಗಳು ಮತ್ತು ರೌಡಿ ಆಸಾಮಿಗಳು, ಸಮಾಜಘಾತುಕ ವ್ಯಕ್ತಿಗಳ ಚಲನವಲನದ ಬಗ್ಗೆ ಸೂಕ್ತ ನಿಗಾ ವಹಿಸುವ ಸಲುವಾಗಿ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ತೀವ್ರ ನಿಗಾವಹಿಸಲಾಗಿದೆ.
Share your comments