ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್.ಕೆ.ಜಿ, ಯುಕೆಜಿ) ಪ್ರಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್ ಕೆಜಿ-ಯುಕೆಜಿ)ಗಳ ಆರಂಭಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಅಗತ್ಯ ಮೂಲ ಸೌಕರ್ಯ ಮತ್ತು ಸಿಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲು ಸಂಪುಟ ಒಪ್ಪಿಗೆ ನೀಡಿತು ಎಂದು ಸಚಿವ ಮಾಧುಸ್ವಾಮಿ ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೊದಲ ಹಂತದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 276 ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಲು ಬೇಕಾದ ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಶಿಕ್ಷಣ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಪಬ್ಲಿಕ್ ಶಾಲೆಗಳಲ್ಲಿ ಆರಂಭಿಸುವ ಎಲ್ಕೆಜಿ, ಯುಕೆಜಿ ಶಿಕ್ಷಕರಿಗೆ 7,500 ರೂಪಾಯಿ, ಸಹಾಯಕಿಯರಿಗೆ 5 ಸಾವಿರ ರೂಪಾಯಿ ಗೌರವ ಸಂಭಾವನೆ ನೀಡಲು ನಿರ್ಧರಿಸಲಾಗಿದೆ. ಮಕ್ಕಳಿಗೆ ಶಿಕ್ಷಣ ನೀಡಲು ಡಿಇಡಿ, ಬಿ.ಇಡಿ ಆದವರಿಗೆ ಮಾಂಟೆಸರಿ ತರಬೇತಿ ನೀಡಲಾಗುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು.
ಡಿಜಿಟಲ್ ಲರ್ನಿಂಗ್ ಯೋಜನೆ: 2020-21ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪ್ರ. ದರ್ಜೆ ಕಾಲೇಜು , ಸರಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಯೋಜನೆಯನ್ನು ಈ ವರ್ಷದಿಂದ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. 430 ಪ್ರ. ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಮತ್ತು 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 35 ಕೋ.ರೂಪಾಯಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದರು.
Share your comments