ಗಂಡೋರಿ ನಾಲಾ ಯೋಜನೆ, ಅಮರ್ಜಾ ಯೋಜನೆ ಹಾಗೂ ಕೆಳದಂಡೆ ಮುಲ್ಲಾಮಾರಿ ಯೋಜನೆ ಜಲಾಶಯಗಳ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಆಣೆಕಟ್ಟಿನ ಸುರಕ್ಷತೆ ಮತ್ತು ಪ್ರವಾಹ ನಿಯಂತ್ರಿಸಲು ಗಂಡೋರಿನಾಲಾ ಆಣೆಕಟ್ಟಿನಿಂದ ಸುಮಾರು 100 ಕ್ಯೂಸೆಕ್ಸ್, ಅಮರ್ಜಾ ಆಣೆಕಟ್ಟಿನಿಂದ ಸುಮಾರು 100 ಕ್ಯೂಸೆಕ್ಸ್ ಹಾಗೂ ಕೆಳದಂಡೆ ಮುಲ್ಲಾಮಾರಿ ನದಿಯಿಂದ ಸುಮಾರು 1000 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಲಬುರಗಿ ಐ.ಪಿ.ಸಿ. ವಿಭಾಗ ನಂ. 1ರ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ಒಳಹರಿವು ಬಂದಲ್ಲಿ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗುತ್ತದೆ. ಆದ್ದರಿಂದ ನದಿಯ ಅಕ್ಕಪಕ್ಕದ ರೈತರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜಲು, ಬಟ್ಟೆ ಒಗೆಯಲು, ದನಕರುಗಳಿಗೆ ನೀರು ಕುಡಿಸಲು ಹಾಗೂ ಇನ್ನಿತರ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದ್ದು, ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಮತ್ತು ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬAಧಪಟ್ಟ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಇಂದಿನಿಂದ ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಗಸ್ಟ್ 31 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಹಾಗೂ ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತಡ ವಿರುವ ಕಾರಣ ಈ ಪ್ರದೇಶದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 29 ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ , ಚಾಮರಾಜನಗರ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವುದರಿಂದ ಆಗಸ್ಟ್ 30 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ 30 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಆಗಸ್ಟ್ 31 ರಂದು ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಶನಿವಾರ ಮುಂಗಾರು ಚುರುಕಾಗಿದ್ದು, ನೈರುತ್ಯ ಮುಂಗಾರಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರು ಆಗಸ್ಟ್ 30ರವರೆಗೆ ಸಮುದ್ರದ ಪ್ರದೇಶಗಳಿಗೆ ಇಳಿಯದಂತೆ ಸೂಚಿಸಲಾಗಿದೆ.
Share your comments